ಮಂಗಳೂರು: "ಕರಾವಳಿಯಲ್ಲಿ ಹೆಣ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಳ್ತಂಗಡಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಅವರು, ಅಬ್ದುಲ್ ಬಷೀರ್ ಸಾವಿನ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಈ ಪ್ರತಿಕ್ರಿಯೆ ನೀಡಿದರು.
ಮುಖ್ಯಮಂತ್ರಿ ಹೋದಲೆಲ್ಲಾ ಹೆಣ ಉರುಳುತ್ತದೆ ಎಂಬ ಬಿಜೆಪಿಯ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಅವರು, "ಇವತ್ತು ಬಷೀರ್ ತೀರಿ ಹೋಗಿದ್ದಾರೆ. ಇದಕ್ಕೆ ಏನು ಹೇಳುತ್ತೀರಿ? ಬಿಜೆಪಿಯವರಿಗೆ ಟೀಕೆ ಮಾಡುವುದೇ ಕೆಲಸ. ಹತ್ಯೆ ಮಾಡುವುದು ಮನುಷ್ಯತ್ವ ವಿರೋಧಿ," ಎಂದು ಹೇಳಿದರು.ಬಷೀರ್ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ ಎಂದು ಹೇಳಿದರು. "ಬಷೀರ್ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡುತ್ತೇವೆ,"
ಎಂದು ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, "ಜಿಲ್ಲೆಯಲ್ಲಿ ನಡೆಯುತ್ತಿರುವ ಈ ಹತ್ಯೆಗಳಲ್ಲಿ ಕಾಣದ ಕೈಗಳ ಕೈವಾಡ ಇದೆ. ಚುನಾವಣೆ ಹಿನ್ನೆಲೆಯಲ್ಲಿ ಇಂತಹ ಕೃತ್ಯ ನಡೆಯುತ್ತಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.ಅಬ್ದುಲ್ ಬಷೀರ್ ಅವರ ಸಾವಿಗೆ ಸಂತಾಪ ಸೂಚಿಸಿದ ಅವರು, "ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಮೂಲ ಹುಡುಕುತ್ತೇವೆ. ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಈ ಕೃತ್ಯ ಎಸಗಲಾಗುತ್ತಿದೆ," ಎಂದು ಆರೋಪಿಸಿದರು.